ಚಿತ್ರೀಕರಣಕ್ಕೆ ಹೊರಟ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರತಂಡ
ಗ್ರಾಮೀಣ ಸೊಗಡಿನ ಕಥೆಗೆ ಸಿನಿಮಾ ಟಚ್
ಇಲ್ಲಿಯವರೆಗೆ ಕನ್ನಡ ಚಿತ್ರರಂಗದಲ್ಲಿ ಗ್ಲಾಮರಸ್ ಪಾತ್ರಗಳ ಮೂಲಕ ಸಿನಿಪ್ರಿಯರ ಮನ-ಗಮನ ಸೆಳೆದಿದ್ದ ನಟಿ ರಾಗಿಣಿ ದ್ವಿವೇದಿ, ಈಗ ನಿಧಾನವಾಗಿ ಕಂಟೆಂಟ್ ಆಧರಿತ ಸಿನಿಮಾಗಳತ್ತ ಒಲವು ತೋರುತ್ತಿದ್ದಾರೆ. ಹೌದು, ಇತ್ತೀಚಿನ ದಿನಗಳಲ್ಲಿ ಒಂದು ಚಿತ್ರದಿಂದ ಮತ್ತೊಂದು ಚಿತ್ರಕ್ಕೆ ವಿಭಿನ್ನ ಪಾತ್ರಗಳನ್ನು ಬಯಸುತ್ತಿರುವ ರಾಗಿಣಿ ದ್ವಿವೇದಿ, ಈಗ ಅಂಥದ್ದೇ ಒಂದು ಸಿನಿಮಾದ ಮೂಲಕ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ಅಂದಹಾಗೆ, ರಾಗಿಣಿ ದ್ವಿವೇದಿ ನಾಯಕಿಯಾಗಿ ಅಭಿನಯಿಸುತ್ತಿರುವ ಹೊಸ ಸಿನಿಮಾದ ಹೆಸರು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’. ಕೆಲ ದಿನಗಳ ಹಿಂದಷ್ಟೇ ಈ ಸಿನಿಮಾದ ಧ್ವನಿಮುದ್ರಣ ಕಾರ್ಯವನ್ನು ಆರಂಭಿಸಿದ್ದ ಚಿತ್ರತಂಡ, ಇದೀಗ ಹಾಡುಗಳ ಕೆಲಸವನ್ನು ಪೂರ್ಣಗೊಳಿಸಿ, ಚಿತ್ರದ ಚಿತ್ರೀಕರಣ ಕಾರ್ಯಕ್ಕೆ ಚಾಲನೆ ನೀಡಿದೆ.

ನಟಿ ರಾಗಿಣಿ ದ್ವಿವೇದಿ ಅವರೊಂದಿಗೆ, ನಟ ಕುಮಾರ್ ಬಂಗಾರಪ್ಪ, ಹಿರಿಯ ನಟ ದೊಡ್ಡಣ್ಣ ಮೊದಲಾದ ಕಲಾವಿದರು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾದ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿದ್ದಾರೆ. ಇನ್ನು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು. ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಆವರಣದಲ್ಲಿರುವ ಶ್ರೀಗಂಗಾಧರೇಶ್ವರ ದೇವಸ್ಥಾನದಲ್ಲಿ ನಡೆದ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾದ ಮುಹೂರ್ತ ಸಮಾರಂಭದಲ್ಲಿ, ಹಿರಿಯ ನಟ ಶ್ರೀನಾಥ್ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿದರು. ಆಹಾರ ಮತ್ತು ನಾಗರೀಕ ಸರಬರಾಜು ಖಾತೆ ಸಚಿವ ಕೆ. ಹೆಚ್. ಮುನಿಯಪ್ಪ, ಶಾಸಕ ಎಲ್. ಶಿವರಾಮೇ ಗೌಡ, ‘ಕರ್ನಾಟಕ ರಾಜ್ಯ ಸರ್ಕಾರತಿ ಪಡಿತರ ವಿತರಕರ ಒಕ್ಕೂಟ’ದ ಅಧ್ಯಕ್ಷ ಟಿ. ಕೃಷ್ಣಪ್ಪ, ನಿರ್ಮಾಪಕ ಭಾ. ಮ. ಹರೀಶ್, ಭಾ. ಮ. ಗಿರೀಶ್ ಸೇರಿದಂತೆ ಅನೇಕರು ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ, ಚಿತ್ರತಂಡಕ್ಕೆ ಶುಭ ಹಾರೈಸಿದರು.